ಚಿಕ್ಕಮಗಳೂರು: ವಿಧಾನ ಸಭಾ ಸಾರ್ವತ್ರಿಕ ಚುನಾವಣೆ ೨೦೨೩ ನ್ನು ನಿಷ್ಪಕ್ಷಪಾತ ಹಾಗೂ ಶಾಂತಿಯುತವಾಗಿ ನಡೆಯಲು ಎಲ್ಲಾ ರಾಜಕೀಯ ಪಕ್ಷಗಳ ಸಹಕಾರ ಬಹಳ ಅತಿ ಮುಖ್ಯ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ.ಎನ್. ರಮೇಶ್ ಹೇಳಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳಿಗೆ ವಿಧಾನ ಸಭಾ ಚುನಾವಣೆಯ ನೀತಿ ಸಂಹಿತೆ ಹಾಗೂ ಕೇಂದ್ರ ಚುನಾವಣಾ ಆಯೋಗ ನೀಡಿರುವ ಮಾರ್ಗ ಸೂಚಿಗಳ ಬಗ್ಗೆ ಮಾಹಿತಿ ನೀಡಲು ಕರೆಯಲಾಗಿದ್ದ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ರಾಜಕೀಯ ಪಕ್ಷಗಳು ಚುನಾವಣಾ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸುವುದು ಕಡ್ಡಾಯವಾಗಿ ನಿಷೇಧಿಸಿದೆ ಹಾಗೂ ಪ್ಲಾಸ್ಟಿಕ್ ಬಳಕೆ, ಸರ್ಕಾರಿ ಜಾಗ ಕಟ್ಟಡಗಳು ಸಾರ್ವಜನಿಕ ಸ್ಥಳಗಳು ಹಾಗೂ ಖಾಸಗಿ ಸ್ಥಳಗಳನ್ನು ಬಳಕೆ ಮಾಡುವಾಗ ಕಡ್ಡಾಯವಾಗಿ ನಿಯಮಗಳನ್ನು ಅನುಸರಿಸುವುದು ಸೇರಿದಂತೆ ಮಾದರಿ ನೀತಿ ಸಂಹಿತೆ ಕಟ್ಟು ನಿಟ್ಟಾಗಿ ಪಾಲಿಸುವಂತೆ ಹೇಳಿದ ಅವರು ಸರ್ಕಾರ ಹಾಗೂ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಸೇರಿದಂತೆ ನೀಡಿದ್ದ ಸರ್ಕಾರಿ ವಾಹನಗಳನ್ನು ಹಿಂಪಡೆಯಲಾಗಿದ್ದು, ಏ. ೧ ಕ್ಕೆ ೧೮ ವರ್ಷ ತುಂಬಿದ ಯುವ ಮತದಾರರಿಗೆ ಮೊದಲ ಬಾರಿಗೆ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ. ಮತದಾನ ಪ್ರಮಾಣವನ್ನು ಹೆಚ್ಚು ಮಾಡಲು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ವಿವಿಧ ಮಾಧ್ಯಮಗಳ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.
ಸುವಿಧಾ ಪೋರ್ಟಲ್ ಮೂಲಕ ಅಭ್ಯರ್ಥಿಗಳಿಗೆ ರಾಜಕೀಯ ಪಕ್ಷಗಳಿಗೆ ಆನ್ ಲೈನ್ ನಾಮ ನಿರ್ದೇಶನ, ಅನುಮತಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈ ಆಫ್ ಮೂಲಕ ಕೋವಿಡ್ ಹಿನ್ನಲೆಯಲ್ಲಿ ಸಭೆ ಸಾರ್ವಜನಿಕ ಸ್ಥಳಗಳನ್ನು ಹಂಚಿಕೆ ಮಾಡಲು ಸುವಿಧಾ ಅಪ್ಲೀಕೇಷನ್ ಅನ್ನು ಪ್ರಾಯೋಗಿಕವಾಗಿ ಬಳಕೆ ಮಾಡಲು ತೀರ್ಮಾನಿಸಲಾಗಿದೆ ಚುನಾವಣೆಯನ್ನು ನಿಷ್ಪಕ್ಷಪಾತ ಹಾಗೂ ಶಾಂತಿಯುತವಾಗಿ ನಡೆಸಲು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಾಗೂ ಚುನಾವಣಾ ಸಿಬ್ಬಂದಿಗಳ ಮೇಲ್ವಿಚಾರಣೆ ನಡೆಸುವ ದೃಷ್ಠಿಯಿಂದ ಹಲವಾರು ಟೀಂಗಳನ್ನು ರಚಿಸಲಾಗಿದ್ದು, ಆಯಾಯಾ ಕ್ಷೇತ್ರಕ್ಕೆ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಚುನಾವಣೆ ಸುವ್ಯವಸ್ಥಿತವಾಗಿ ನಡೆಯಲು ಹಾಗೂ ಅಕ್ರಮ ತಡೆಗಟ್ಟಲು ವಿವಿಧ ರಾಜಕೀಯ ಪಕ್ಷಗಳು ಮತ್ತು ಮುಖಂಡರುಗಳಿಗೆ ಬರುವ ದೂರಗಳನ್ನು ಚುನಾವಣಾ ಅಧಿಕಾರಿಗಳ ಗಮನಕ್ಕೆ ತರುವಂತೆ ಹಾಗೂ ಮತದಾರರ ಪಟ್ಟಿಗೆ ಹೆಸರು ಸೇರಿಸದೆ ಇರುವ ಬಗ್ಗೆ ಬಂದ ದೂರುಗಳ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿದೆ ಎಂದು ಹೇಳಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಅಪರ ಜಿಲ್ಲಾಧಿಕಾರಿ ಬಿ.ಆರ್. ರೂಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಸಭೆಯಲ್ಲಿ ಹಾಜರಿದ್ದರು.
Cooperation of political parties is important