ಚಿಕ್ಕಮಗಳೂರು: ಕಡೂರು ಕ್ಷೇತ್ರದಲ್ಲಿ ಕರ್ನಾಟಕ ಸರ್ವೋದಯ ಪಕ್ಷದ ಅಭ್ಯರ್ಥಿಯಾಗಿ ಕೆ.ಟಿ.ಆನಂದ್ ಅವರು ಕಣಕ್ಕಿಳಿಸಲಾಗಿದೆ. ಜಿಲ್ಲೆಯ ಬಾಕಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲ ನೀಡಲು ನಿರ್ಧರಿಸಿದ್ದೇವೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಶನಿವಾರ ಇಲ್ಲಿ ತಿಳಿಸಿದರು.
ರಾಜ್ಯದ ಒಂಬತ್ತು ಕ್ಷೇತ್ರಗಳಲ್ಲಿ ಕರ್ನಾಟಕ ಸರ್ವೋದಯ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಈ ಪೈಕಿ ಮಂಡ್ಯ, ಮೇಲುಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲ ಸೂಚಿಸಿದೆ. ಅದರಂತೆ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ರೈತ ಸಂಘ ಕಾಂಗ್ರೆಸ್ ಬೆಂಬಲಿಸಲು ನಿರ್ಧರಿಸಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿಯನ್ನು ಮಣಿಸುವ ಶಕ್ತಿ ಕಾಂಗ್ರೆಸ್ಗೆ ಇದೆ ಎಂದು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಡಿ.ಮಹೇಶ್ ಮಾತನಾಡಿ, ಜಿಲ್ಲೆಯಲ್ಲಿ ನೀರಾವರಿ, ರಸ್ತೆ, ಕುಡಿಯುವ ನೀರು, ಕೆರೆ ಅಭಿವೃದ್ಧಿ ಮೊದಲಾದ ಜ್ವಲಂತ ಸಮಸ್ಯೆಗಳಿವೆ. 20 ವರ್ಷದ ಆಡಳಿತದಲ್ಲಿ ಇಲ್ಲಿನ ಶಾಸಕರಿಗೆ ಇವುಗಳನ್ನು ಪರಿಹರಿಸಲು ಸಾಧ್ಯವಾಗಿಲ್ಲ ಎಂದು ದೂರಿದರು.
ಬಿಜೆಪಿ ಸರ್ಕಾರ ಅಭಿವೃದ್ಧಿ ಬಿಟ್ಟು ಭಾವನಾತ್ಮಕ ವಿಚಾರದೊಂದಿಗೆ ಮತಬ್ಯಾಂಕ್ಗೆ ಮುಂದಾಗಿದೆ ಎಂದು ಆರೋಪಿಸಿದರು.
ಜಿಲ್ಲಾ ರೈತ ಸಂಘದ ಮಲ್ಲುಂಡಪ್ಪ, ರಾಜ್ಯ ಸಮಿತಿ ಸದಸ್ಯ ಕೆ.ಕೆ.ಕೃಷ್ಣೇಗೌಡ, ಎಂ.ಸಿ.ಬಸವರಾಜ್ ಇದ್ದರು.
Support for Congress party in 4 constituencies of the district