ಬೆಂಗಳೂರು: ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮೀ ಯೋಜನೆಯಡಿ ಗೃಹಿಣಿಯರಿಗೆ ಪ್ರತಿ ತಿಂಗಳು 2000 ರೂಪಾಯಿ ನೀಡಲಾಗುವುದು. ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳಿಗೆ 3000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂ. ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.
ಐದು ಗ್ಯಾರಂಟಿಗಳಿಗೆ ಸುಮಾರು 50 ಸಾವಿರ ಕೋಟಿ ಆಗಬಹುದು. ಕಟ್ಟುನಿಟ್ಟಾದ ತೆರಿಗೆ ಸಂಗ್ರಹ ಮೂಲಕ ನಾವು ಆರ್ಥಿಕ ಹೊರೆಯನ್ನು ಕಡಿಮೆ ಮಾಡಿಕೊಳ್ಳುತ್ತೇವೆ. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರಬೇಕಿದೆ. ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ. ನಮ್ಮ ರಾಜ್ಯದ ಬಜೆಟ್ ಗಾತ್ರ 3.10 ಲಕ್ಷ ಕೋಟಿ ರೂ. ಇದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ಸಿದ್ದರಾಮಯ್ಯ ದೂರಿದರು.
Agree in principle to five guarantees