ಚಿಕ್ಕಮಗಳೂರು: ಮಂಗಳೂರು ಘಟನೆಯನ್ನು ಖಂಡಿಸಿ ಕೆಲ ಸಂಘಟನೆಗಳು ಸೋಮವಾರ ಚಿಕ್ಕಮಗಳೂರು ಜಿಲ್ಲಾ ಬಂದ್ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿವೆ. ಆದರೆ ಈ ಬಂದ್ ಗೆ ಜಿಲ್ಲಾಡಳಿತವಾಗಲಿ ಅಥವಾ ಪೊಲೀಸ್ ಇಲಾಖೆಯಾಗಲಿ ಅನುಮತಿ ನೀಡಿಲ್ಲ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರೇ ಬಂದ್ ಮಾಡುವುದಾದರೂ ಜಿಲ್ಲಾಡಳಿತ ಅಥವಾ ಪೊಲೀಸ್ ಇಲಾಖೆಗೆ ಮನವಿ ನೀಡಿ ಅನುಮತಿ ಪಡೆಯಬೇಕಿತ್ತು. ಆದರೆ ಯಾರು ಅನುಮತಿ ಪಡೆದಿಲ್ಲ ಎಂದರು.
ಸೋಮವಾರ ಜಿಲ್ಲೆಯ ಹಲವೆಡೆ ಸಂತೆ ನಡೆಯುತ್ತದೆ. ಜೊತೆಗೆ ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪರೀಕ್ಷೆ ನಡೆಯುತ್ತಿದೆ. ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಹಿನ್ನೆಲೆಯಲ್ಲಿ ಬಂದ್ಗೆ ಯಾವುದೇ ಅನುಮತಿ ನೀಡುವುದಿಲ್ಲ ಎಂದು ಹೇಳಿದರು.
ಬಂದ್ಗೆ ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಿದ್ದ ಸಂಘಟನೆಗಳ ಪ್ರಮುಖರಿಗೆ ನೋಟಿಸ್ ನೀಡಿ ಜಿಲ್ಲಾಧಿಕಾರಿ ಕಚೇರಿಗೆ ಕರೆಯಿಸಿ ಅವರಿಗೆ ಬಂದಿಂದ ಆಗುವ ಸಮಸ್ಯೆಗಳ ಬಗ್ಗೆ ಹಾಗೂ ಸುಪ್ರೀಂಕೋರ್ಟ್ ಆದೇಶಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಬಂದ್ ಬದಲಿಗೆ ಪ್ರತಿಭಟನೆ ಮಾಡಲು ಅನುಮತಿ ನೀಡುತ್ತೇವೆ ಎಂದು ತಿಳಿಸಿದರು.
ಎಸ್‌ಪಿ ವಿಕ್ರಮ್ ಅಮಟೆ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ಜಿಲ್ಲಾ ಬಾಯಿಗೆ ಕರೆ ನೀಡಿರುವ ಹಾಕಲಾಗಿದೆ. ಹೀಗಾಗಿ ಈ ಸಂಘಟನೆಗಳ ಎಲ್ಲಾ ಮುಖಂಡರಿಗೆ ಕರೆ ಮಾಡಿ ಹಾಗೂ ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಿ ಡಿಸಿ ಕಚೇರಿಗೆ ಕರೆಯಿಸಿ ಅವರೊಂದಿಗೆ ಸಭೆ ನಡೆಸಲಾಗಿದೆ. ಜೊತೆಗೆ ಬಂದ್ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶಗಳ ಬಗ್ಗೆಯೂ ಮಾಹಿತಿ ನೀಡಿದ್ದೇವೆ ಎಂದರು.
ಪಹಲ್ಗಾಮ್ ಹಾಗೂ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಗಳಿಗೆ ಸಂಬಂಧಪಟ್ಟಂತೆ ಜಿಲ್ಲೆಯಲ್ಲಿ ಹಲವಾರು ಪ್ರತಿಭಟನೆಗಳು ನಡೆದಿವೆ. ಮಂಗಳೂರು ಘಟನೆಗೆ ಸಂಬಂಧಿಸಿದಂತೆಯು ಪ್ರತಿಭಟನೆ ನಡೆದಿದೆ. ಈ ಪ್ರಕರಣದಲ್ಲಿ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಈ ಎಲ್ಲಾ ಸೂಕ್ಷ್ಮಗಳನ್ನು ಜಿಲ್ಲಾ ಬಂದ್ ಗೆ ಕರೆ ನೀಡಿದ ಸಂಘಟನೆಗಳ ಪ್ರಮುಖರಿಗೆ ತಿಳಿಸಲಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ ಉಪಸ್ಥಿತರಿದ್ದರು.
Chikmagalur district bandh not permitted
