June 15, 2026
Suddigaralive News
ಚಿಕ್ಕಮಗಳೂರುಚಿಕ್ಕಮಗಳೂರು ನಗರಜಿಲ್ಲಾ ಸುದ್ದಿತಾಲೂಕು

ಜನವಿರೋಧಿ ರಾಜ್ಯಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನ ಮಾಡದೇ ಇರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ತಾಲ್ಲೂಕಿನ ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.

ಇಂದು ಬೆಳಗ್ಗೆ ಪಂಚಾಯಿತಿ ಮುಂಭಾಗದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ಉಮೇಶ್ ಶೆಟ್ಟಿ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ಕೆಲವರ ಬಿಪಿಎಲ್ ಪಡಿತರ ಚೀಟಿ ರದ್ದುಮಾಡುವ ಮೂಲಕ ಬಡವರ ಹಕ್ಕುಗಳನ್ನು ಧಮನ ಮಾಡುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರದ ಯೋಜನೆಗಳನ್ನು ಅನುಷ್ಠಾನಕ್ಕೆ ತರದೇ ಇರುವ ಪರಿಣಾಮ ಬಡಜನರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ನೋಂದಣಿ ಶುಲ್ಕ ಹೆಚ್ಚಳದಿಂದಾಗಿ ಬಡವರು ನಿವೇಶನ, ಮನೆ ಕೊಳ್ಳುವ ಆಸೆಯಿಂದ ವಿಮುಖರಾಗಬೇಕಾಗಿದೆ ಎಂದು ದೂರಿದರು.

ಗ್ರಾ.ಪಂ ಉಪಾಧ್ಯಕ್ಷೆ ಅಂಬಿಕಾ ಮಾತನಾಡಿ, ಗ್ರಾಮಠಾಣೆ ಜಾಗ ವಿಸ್ತರಣೆ ಮಾಡದ ಪರಿಣಾಮ ನಿವೇಶನಗಳಿಗೆ ಇ-ಸ್ವತ್ತು ಮಾಡಲು ವಿಳಂಭವಾಗುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆಶೋತ್ತರಗಳಿಗೆ ಸ್ಪಂದಿಸಲು ಕಷ್ಟಸಾಧ್ಯವಾಗುತ್ತಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

೬೦ ವರ್ಷ ಮೇಲ್ಪಟ್ಟ ವೃದ್ಧರಿಗೆ ಸಂಧ್ಯಾ ಸುರಕ್ಷಾ ಯೋಜನೆಯಡಿ ಹಣವನ್ನು ಅವರ ಖಾತೆಗೆ ನೇರ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದ ಅವರು, ರಾಜ್ಯಸರ್ಕಾರದಿಂದ ಗ್ರಾಮ ಪಂಚಾಯಿತಿಗಳಿಗೆ ಯಾವುದೇ ಅನುದಾನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ತೊಂದರೆಯಾಗುತ್ತಿದೆ ಎಂದು ದೂರಿದರು.

ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ಮಾತನಾಡಿ, ರಾಜ್ಯ ಸರ್ಕಾರದ ದುರಾಡಳಿತದ ವಿರುದ್ಧ ಪಂಚಾಯಿತಿ ಮಟ್ಟದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಧ್ವನಿ ಎತ್ತಬೇಕೆಂಬ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆಶಯದಂತೆ ಇಂದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ರಾಜ್ಯಸರ್ಕಾರ ಬಡಜನರ, ದಲಿತರ ವಿರೋಧಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಹಿಂದ, ಬಡಜನರ ಪರ ಎಂದು ಕೇವಲ ಮಾತಿಗೆ ಸೀಮಿತವಾಗಿದ್ದಾರೆಂದು ಆರೋಪಿಸಿದರು.

ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರರಿಂದ ಇನ್ನೂರು ಜನರ ಸಂಧ್ಯಾ ಸುರಕ್ಷಾ ಯೋಜನೆಯ ಪಟ್ಟಿಯನ್ನು ಪರಿಷ್ಕರಿಸಿ ಎಂಬ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದಾರೆ. ಇಡೀ ರಾಜ್ಯದಲ್ಲಿ ೪೫ ಲಕ್ಷ ವೃದ್ಧರು ಈ ಯೋಜನೆಯಡಿ ಸೌಲಭ್ಯ ಪಡೆಯುತ್ತಿದ್ದು, ಇವರ ಮೇಲೆ ಸರ್ಕಾರ ಕೋಪ ಮಾಡಿಕೊಂಡು ಐದು ಗ್ಯಾರಂಟಿಗಳಿಗೆ ಹಣ ಒದಗಿಸಲು ಈ ನಿರ್ಧಾರ ಕೈಗೊಂಡಿದ್ದಾರೆಂದು ಟೀಕಿಸಿದರು.

ಅಕ್ರಮ-ಸಕ್ರಮ ಫಾರಂ ನಂ ೫೩, ೫೭ ಅರ್ಜಿಗಳನ್ನು ಶೀಘ್ರ ವಿಲೇವಾರಿಗೊಳಿಸಬೇಕು, ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ ಬಡವರ ಆಶ್ರಯ ಮನೆಗಳಿಗೆ ಮಂಜೂರಾತಿ ನೀಡಿ ಅನುದಾನ ಬಿಡುಗಡೆ ಮಾಡಬೇಕು, ಬಡವರ ಬಿಪಿಎಲ್ ಕಾರ್ಡ್‌ಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸಬಾರದು, ೭೦ ವರ್ಷ ಮೇಲ್ಪಟ್ಟ ಎಲ್ಲಾ ವರ್ಗದವರಿಗೂ ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಸದಸ್ಯರುಗಳಾದ ಗಿರೀಶ್, ಮಂಜುನಾಥ್ ಗೌಡ, ಸಂದೀಪ್, ಪದ್ಮ, ಕಮಲಾಕ್ಷಿ, ಸವೀತ, ಗ್ರಾಮಸ್ಥರಾದ ಲಕ್ಷ್ಮಣ್‌ಗೌಡ, ಚಂದ್ರೇಗೌಡ, ಸುರೇಶ್, ಹರೀಶ್, ಲಂಬೋದರ, ಪ್ರಸಾದ್, ಶಿವೇಗೌಡ, ಅಶೋಕ್‌ಕುಮಾರ್, ಪದ್ಮಣ್ ಮುಳ್ಳಯ್ಯ, ಪವನ್, ಹಾಲಪ್ಪ, ರಮೇಶ್, ಎಂ.ವಿ. ಆದೇಶ್, ಪಂಚಾಕ್ಷರಿ, ರಾಜು, ಪ್ರಸಾದ್ ಆಚಾರ್ಯ, ಜಯಪ್ಪ, ರಾಜಶೇಖರ್, ಜಗದೀಶ್, ಧರ್ಮೇಗೌಡ, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

BJP protests against anti-people state government’s actions

Related posts

ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯ

Team Suddigara

ಅಕ್ರಮ ಗಾಂಜಾ ಸಾಗಾಟ – ಮೂಡಿಗೆರೆಯಲ್ಲಿ ಯುವಕ ಬಂಧನ

Team Suddigara

ವಿವಿಧ ಬೇಡಿಕೆಗೆ ಆಗ್ರಹಿಸಿ ವಸತಿ ಶಾಲೆಗಳ ಖಾಯಂ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

Team Suddigara

Leave a Comment