ಚಿಕ್ಕಮಗಳೂರು: ಸ್ವಚ್ಛತೆ ಮೂಲಕ ಬಹುದೊಡ್ಡ ಕಾಯಕ ಮಾಡುತ್ತಿರುವ ಪೌರ ಕಾರ್ಮಿಕರು ನಗರದ ನಾಗರೀಕರ ಆರೋಗ್ಯ ಕಾಪಾಡಲು ಶ್ರಮಿಸುತ್ತಿರುವ ಜೊತೆಗೆ ತಮ್ಮ ಆರೋಗ್ಯಕ್ಕೆ ಆದ್ಯ ಗಮನ ಕೊಡಬೇಕು ಎಂದು ನಗರಸಭಾಧ್ಯಕ್ಷೆ ಶೀಲಾ ದಿನೇಶ್ ಹೇಳಿದರು.
ಅವರು ಇಂದು ನಗರಸಭೆ ಆವರಣದಲ್ಲಿ ಸಹ್ಯಾದ್ರಿ ನಾರಾಯಣ ಹೃದಯಾಲಯ ಶಿವಮೊಗ್ಗ, ನಗರಸಭೆ, ಜಿಲ್ಲಾ ವಿಕಲಚೇತನರ ಪುನರ್ ವಸತಿ ಕೇಂದ್ರ, ಎಸ್‌ಪಿಐಡಿ ಸಂಸ್ಥೆ, ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರ ಇವರುಗಳ ಸಂಯುಕ್ತಾಶ್ರಯದಲ್ಲಿ ಜೀವಿತಾ ಫೌಂಡೇಶನ್ ಏರ್ಪಡಿಸಿದ್ದ ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಇಂದು ನಡೆಯುತ್ತಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪರೀಕ್ಷೆ ಮಾಡಿಸಿಕೊಂಡ ಪೌರ ಕಾರ್ಮಿಕರು ತಮ್ಮ ಆರೋಗ್ಯಕ್ಕೆ ಹೆಚ್ಚು ಒತ್ತುನೀಡಿದಾಗ ಮಾತ್ರ ನಗರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ, ಪೌರ ಕಾರ್ಮಿಕರಿಗೆ ಗ್ಲೌಸ್, ಶೂ ಮತ್ತಿತರ ಮೂಲ ಸೌಕರ್ಯಗಳನ್ನು ನಗರಸಭೆ ಒದಗಿಸಿದ್ದರೂ ಧರಿಸದೇ ಬಂದು ಸ್ವಚ್ಛತೆ ಕಾರ್ಯ ಮಾಡುತ್ತಿರುವ ಬಗ್ಗೆ ಸಂಬಂಧಪಟ್ಟ ಇಂಜಿನಿಯರ್‌ಗೆ ಸೂಚನೆ ನೀಡಿದರು.
ಪೌರಾಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ಪೌರ ಕಾರ್ಮಿಕರಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣಾ ಶಿಬಿರವನ್ನು ನಡೆಸುತ್ತಿದ್ದು, ಇದಕ್ಕೆ ಪೂರಕವಾಗಿ ಜೀವಿತಾ ಫೌಂಡೇಶನ್ ಅವರು ಮುಂದೆ ಬಂದಿರುವುದಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.
ಪೌರ ಕಾರ್ಮಿಕರು ವೈದ್ಯರ ಸಲಹೆ ಸೂಚನೆಗಳನ್ನು ಪಾಲಿಸದೇ ಇರುವುದರಿಂದ ಅನಾರೋಗ್ಯಕ್ಕೆ ಕಾರಣವಾಗುತ್ತಿದೆ. ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಂಡು ನಿಗದಿತ ಸಮಯದಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕೆಂದು ಕಿವಿಮಾತು ಹೇಳಿದರು.
ನಾರಾಯಣ ಹೃದಯಾಲಯ ಆಸ್ಪತ್ರೆ ವೈದ್ಯ ಡಾ. ನಿತಿನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಸೇರಿದಂತೆ ವಿವಿಧ ರೀತಿಯ ಕಾಯಿಲೆಗಳು ಹೆಚ್ಚುತ್ತಿದ್ದು, ಬಹಳ ಮುಖ್ಯವಾಗಿ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಪೌರ ಕಾರ್ಮಿಕರು ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯುವ ಮೂಲಕ ಪರಿಹರಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಮದ್ಯಪಾನ, ಧೂಮಪಾನದಂತಹ ಕೆಲವು ಹವ್ಯಾಸಗಳನ್ನು ಪೌರ ಕಾರ್ಮಿಕರು ತ್ಯಜಿಸುವ ಮೂಲಕ ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡಬೇಕೆಂಬ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು. ಪೌಷ್ಟಿಕ ಆಹಾರ ಸೇವಿಸಬೇಕು, ಜೊತೆಗೆ ಎಣ್ಣೆಯಲ್ಲಿ ಕರಿದ ಪದಾರ್ಥಗಳನ್ನು ಕಡಿಮೆ ಮಾಡಬೇಕು. ಇದು ಆದಾಗ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಹೃದಯಾಘಾತ ತಡೆಯಲು ಸಾಧ್ಯ ಎಂದು ಹೇಳಿದರು.
ಉಪಾಧ್ಯಕ್ಷೆ ಅನುಮಧುಕರ್ ಮಾತನಾಡಿ, ಜನಹಿತಕ್ಕಾಗಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ನಿಗದಿತ ಸಮಯದಲ್ಲಿ ಸೂಕ್ತ ಚಿಕಿತ್ಸೆ ಪಡೆದುಕೊಂಡು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ತಿಳಿಸಿದರು. ಮೊದಲಿಗೆ ಜೀವಿತ ಫೌಂಡೇಶನ್ ಅಧ್ಯಕ್ಷ ಪ್ರಕಾಶ್ ಪ್ರಾಸ್ತಾವಿಕವಾಗಿ ಸ್ವಾಗತಿಸಿ ಮಾತನಾಡಿ, ಕಳೆದ ೧೩ ವರ್ಷಗಳಿಂದ ಫೌಂಡೇಶನ್ ೮ ಸಾವಿರ ವಿಕಲ ಚೇತನರಿಗೆ ಚಿಕಿತ್ಸೆ ಜೊತೆಗೆ ಸಾಧನ ಸಲಕರಣೆಗಳನ್ನು ನೀಡುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಗೋಪಿ, ಪರಿಸರ ಅಭಿಯಂತರರಾದ ತೇಜಸ್ವಿನಿ, ಆರೋಗ್ಯ ನಿರೀಕ್ಷಕ ನಾಗಪ್ಪ ಹಾಗೂ ನಾಗರಾಜು, ಶ್ರೀನಿವಾಸ, ವಿವೇಕ್, ಅಣ್ಣಯ್ಯ, ಸತೀಶ್ ಉಪಸ್ಥಿತರಿದ್ದರು.
Free health check-up camp for civic workers

Leave a Reply