ಚಿಕ್ಕಮಗಳೂರು: ತೈಲಬೆಲೆ ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಇಂದು ನಗರದ ಹನುಮಂತಪ್ಪ ವೃತ್ತದಲ್ಲಿ ರಸ್ತೆ ತಡೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿತು.
ಇಂದು ಬೆಳಗ್ಗೆ ಬಿಜೆಪಿ ನಗರಾಧ್ಯಕ್ಷ ಪುಷ್ಪರಾಜ್ ನೇತೃತ್ವದಲ್ಲಿ ತಾಲೂಕು ಕಚೇರಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಹನುಮಂತಪ್ಪ ವೃತ್ತದಲ್ಲಿ ಸಮಾವೇಶಗೊಂಡು ರಸ್ತೆತಡೆ ನಡೆಸಿದ ಸಂದರ್ಭದಲ್ಲಿ ಸುಮಾರು ೧೫ಕ್ಕೂ ಹೆಚ್ಚು ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.
ಸುಮಾರು ೫೦ ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು, ಕಳೆದ ೫ ದಿನಗಳಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ನಡೆಸಿದ ೩ನೇ ಪ್ರತಿಭಟನೆ ಇದಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕೂಡಲೇ ಹೆಚ್ಚಿಸಿರುವ ತೈಲಬೆಲೆ ಆದೇಶವನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದರು.
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹಾಗೂ ರಸ್ತೆ ತಡೆಯಿಂದಾಗಿ ನಗರದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು, ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ನಂತರ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ಈ ಪ್ರತಿಭಟನೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿ ಬಿ.ರಾಜಪ್ಪ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರವೀಂದ್ರ ಬೆಳವಾಡಿ, ಸಿ.ಆರ್ ಪ್ರೇಮ್ಕುಮಾರ್, ಜಿಲ್ಲಾ ವಕ್ತಾರ ಹೆಚ್.ಎಸ್ ಪುಟ್ಟಸ್ವಾಮಿ, ಕೌಸಿಕ್, ನಗರ ಪ್ರಧಾನ ಕಾರ್ಯದರ್ಶಿ ಜಿ.ಶಂಕರ್, ವೆಂಕಟೇಶ್ ರಾಜ್, ರೇವನಾಥ್, ಕಬೀರ್, ಅನ್ವರ್ ಸಾಗಾಯಿ ದಾಸ್, ಓಂಕಾರೇಗೌಡ ಮತ್ತಿತರರು ಭಾಗವಹಿಸಿದ್ದರು.
BJP blocks road in Hanumanthappa Circle to condemn oil price rise