ಕರ್ನೂಲು: ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಸಂಸ್ಥೆಯ ಸ್ಲೀಪರ್ ಎ.ಸಿ ಬಸ್‌ವೊಂದು ಅಪಘಾತದಲ್ಲಿ ಬೆಂಕಿ ಹೊತ್ತಿ ಉರಿದಿದ್ದರಿಂದ 20 ಮಂದಿ ಸಜೀವ ದಹನಗೊಂಡ ಘಟನೆ ಜಿಲ್ಲೆಯ ಚಿನ್ನತೇಕೂರು ಗ್ರಾಮದ ಬಳಿ ಶುಕ್ರವಾರ ನಡೆದಿದೆ.
ಮುಂದಿದ್ದ ಬೈಕ್‌ಅನ್ನು ಹಿಂದಿಕ್ಕಲು ಚಾಲಕ ಯತ್ನಿಸಿದಾಗ ಬೈಕ್‌ಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ. ಬಸ್‌ನಲ್ಲಿದ್ದವರ ಪೈಕಿ 19 ಪ್ರಯಾಣಿಕರು ಸಜೀವ ದಹನಗೊಂಡರೆ, ಘಟನೆಯಲ್ಲಿ ಬೈಕ್ ಸವಾರ ಕೂಡ ಮೃತಪಟ್ಟಿದ್ದಾರೆ.
ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ದೀಪಾವಳಿಗಾಗಿ ಹೈದರಾಬಾದ್ ಹಾಗೂ ಇತರ ಸ್ಥಳಗಳಿಗೆ ತೆರಳಿದ್ದವರು, ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ ವಾಪಸಾಗುತ್ತಿದ್ದರು.
ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿವೆ. ಮೃತರ ಗುರುತು ಪತ್ತೆಗಾಗಿ ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತಿದ್ದು, ವಿಧಿವಿಜ್ಞಾನ ತಜ್ಞರ ತಂಡವೊಂದು ಘಟನಾ ಸ್ಥಳಕ್ಕೆ ತೆರಳಿ ಮಾದರಿಗಳನ್ನು ಸಂಗ್ರಹಿಸಿದೆ. ಶುಕ್ರವಾರ ಬೆಳಗಿನ ಜಾವ ಈ ಅವಘಡ ಸಂಭವಿಸಿದೆ. ಆಗ ಪ್ರಯಾಣಿಕರು ಗಾಢನಿದ್ರೆಯಲ್ಲಿ ಇದ್ದರು. ಹೀಗಾಗಿ ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸಾವಿನ ಸಂಖ್ಯೆ ಹೆಚ್ಚಾಗಲು ಇದು ಕೂಡ ಒಂದು ಕಾರಣ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ ರೆಡ್ಡಿ ಅವರು ಘಟನೆ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಹ ದುರ್ಘಟನೆ ಕುರಿತು ದುಃಖ ವ್ಯಕ್ತಪಡಿಸಿದ್ದಾರೆ.
20 people burnt alive in AC bus fire
