ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದಿನಿಂದ ೧೫ ದಿನಗಳ ಕಾಲ ಪೋಷಣ ಅಭಿಯಾನ ಯೋಜನೆಯಲ್ಲಿ ವಿವಿಧ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಇಂದು ನಡೆದ ಪೋಷಣ ಪಕ್ವಾಡ ಕಾರ್ಯಕ್ರಮದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರಿ ಕಾರ್ಯಕ್ರಮಗಳನ್ನು ಬಹಳ ಪರಿಣಾಮಕಾರಿಯಾಗಿ ಹಾಗೂ ವ್ಯವಸ್ಥಿತವಾಗಿ ರೂಪಿಸಿ ಹೆಚ್ಚು ಜನರಿಗೆ ತಲುಪುವಂತೆ ಅನುಷ್ಠಾನಗೊಳಿಸಲು ಅಧಿಕಾರಿಗಳು ಕ್ರಮ ವಹಿಸಬೇಕು ಎಂದ ಅವರು, ಪೋಷಣ ಅಭಿಯಾನ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದೆ. ರಾಷ್ಟ್ರಾದ್ಯಂತ ಅನುಷ್ಠಾನಗೊಳ್ಳುತ್ತಿರುವ ಈ ಯೋಜನೆ ಕೇವಲ ಫಲಾನುಭವಿಗಳಿಗೆ ಸೀಮಿತಗೊಳ್ಳದೆ,
ಮಾಹಿತಿ, ಶಿಕ್ಷಣ, ಸಂವಹನ ಮೂಲಕ ಜನಾಂದೋಲನ ಹಾಗೂ ಸಮುದಾಯ ಆಧಾರಿತ ಚಟುವಟಿಕೆಗಳನ್ನು ವಿವಿಧ ವೇದಿಕೆಗಳಲ್ಲಿ ವಿಭಿನ್ನ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಸಮುದಾಯದ ಪ್ರತಿಯೊಬ್ಬರಿಗೂ ಆರೋಗ್ಯ ಹಾಗೂ ಪೌಷ್ಟಿಕತೆಯ ಮಹತ್ವದ ಅರಿವು ನೀಡುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.
ಸಮಗ್ರ ಶಿಶು ಅಭಿವೃದ್ಧಿ ಯೋಜನೆಯು ೦-೬ ವರ್ಷದ ಮಕ್ಕಳು, ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು ಮತ್ತು ಕಿಶೋರಿಯರ ಪೌಷ್ಟಿಕತೆಯ ಸ್ಥಿತಿಯನ್ನು ನಿರ್ದಿಷ್ಟ ಅವಧಿಗೆ ಅನುಗುಣವಾಗಿ ಸುಧಾರಣೆಗೊಳ್ಳುವಂತೆ ಮಾಡುವುದು ಈ ಯೋಜನೆಯ ಉದ್ದೇಶವಾಗಿದ್ದು, ಒಟ್ಟಾರೆ ದಿನನಿತ್ಯದ ಆರೋಗ್ಯ ಹಾಗೂ ಪೌಷ್ಟಿಕತೆಗೆ ಸಂಬಂಧಿಸಿದ ಚಟುವಟಿಕೆಗಳನ್ನು ಕೈಗೊಳ್ಳುವುದರಿಂದ ಧನಾತ್ಮಕ ಬದಲಾವಣೆಗಳೊಂದಿಗೆ ಜೀವನಮಟ್ಟ ಸುಧಾರಣೆಯಾಗಲಿದೆ.
ಮಕ್ಕಳಲ್ಲಿನ ರಕ್ತಹೀನತೆ, ಮಹಿಳೆಯರು ಮತ್ತು ಹದಿಹರೆಯದ ಹೆಣ್ಣು ಮಕ್ಕಳಲ್ಲಿನ ರಕ್ತಹೀನತೆಯನ್ನು ಹಾಗೂ ಕಡಿಮೆ ತೂಕದ ಜನನ ಪ್ರಮಾಣವನ್ನು ಸಂಪೂರ್ಣ ಕಡಿಮೆಗೊಳಿಸುವುದು ಬಹಳ ಮುಖ್ಯ ಎಂದ ಜಿಲ್ಲಾಧಿಕಾರಿಗಳು, ಈ ಯೋಜನೆಯ ಯಶಸ್ಸಿಗೆ ವಿವಿಧ ಇಲಾಖೆಗಳ ಸಮನ್ವಯತೆ ಮುಖ್ಯವಾಗಿದ್ದು, ಈ ಬಗ್ಗೆ ಅರಿವು ಮೂಡಿಸಲು ಮುಂದಾಗಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹೆಚ್.ಎಸ್.ಕೀರ್ತನಾ, ಡಾ.ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ್ ಭಜಂತ್ರಿ, ವಿವಿಧ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
Nutrition campaign begins in the district
